June 22, 2021

ವಿದ್ಯಾರ್ಥಿಗಳ ಕಲಿಕಾ ಮಟ್ಟ ಸುಧಾರಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ -ಜಿ.ಪಂ.ಅಧ್ಯಕ್ಷ ಏಕನಾಥ ಭಾನುವಳ್ಳಿ

ಹಾವೇರಿ: ಕೋವಿಡ್‍ನಿಂದಾಗಿ ವಿದ್ಯಾರ್ಥಿಗಳು ಒಂಭತ್ತು ತಿಂಗಳ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಸುಧಾರಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ನಿಟ್ಟಿಯಲ್ಲಿ ಎಲ್ಲರೂ ಒಟ್ಟಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಏಕನಾಥ ಭಾನುವಳ್ಳಿ ಅವರು ಹೇಳಿದರು.
ನಗರದ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಾಲಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ತರಗತಿಗಳು ನಡೆದಿಲ್ಲ. ಇಂತಹ ಸಂದರ್ಭದಲ್ಲಿ ಜಾತ್ರೆ ಹಾಗೂ ಅನಗತ್ಯ ಸಂದರ್ಭಗಳಲ್ಲಿ ಶಾಲೆಗಳಿಗೆ ರಜೆ ನೀಡಿದರೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನೆಡೆ ಉಂಟಾಗುತ್ತದೆ. ಹಾಗಾಗಿ ಶಾಲೆಗಳಿಗೆ ಸಣ್ಣಪುಟ್ಟ ಕಾರಣಗಳಿಗೆ ರಜೆ ನೀಡಬೇಡಿ. ಒಂದು ವೇಳೆ ರಜೆ ನೀಡಿದರೆ ಪರ್ಯಾಯವಾಗಿ ರವಿವಾರ ಶಾಲೆ ನಡೆಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.


ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಮಾತನಾಡಿ, ಶಿಕ್ಷಣ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಕಲಿಕೆಗೆ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಮೊದಲಿಗಿಂತ ಈಗ ವ್ಯವಸ್ಥೆ ಸುಧಾರಿಸಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು, ಶಿಕ್ಷಣದ ಕಡೆಗೆ ಮಕ್ಕಳನ್ನು ಆಕರ್ಷಿತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.
ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ 33ನೇ ಸ್ಥಾನದಲ್ಲಿತ್ತು. ಈ ಶೈಕ್ಷಣಿಕ ವರ್ಷದಲ್ಲಿ ಕೋವಿಡ್‍ನಿಂದಾಗಿ ಮಕ್ಕಳ ಕಲಿಕೆಯಲ್ಲಿ ತೊಂದರೆಯಾಗಿದೆ. ಶಿಕ್ಷಕರು ಕ್ರಿಯಾಶೀಲರಾಗಿ ಈಗಿರುವ ಅವಕಾಶವನ್ನು ಬಳಸಿಕೊಂಡು ಎಲ್ಲ ವಿದ್ಯಾರ್ಥಿಗಳನ್ನು ಗಣನೆಗೆ ತೆಗೆದುಕೊಂಡು ಉತ್ತಮ ರೀತಿಯಲ್ಲಿ ಬೋಧನೆಮಾಡುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವಂತೆ ಕಾರ್ಯನಿರ್ವಹಿಸಲು ಸಲಹೆ ನೀಡಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಹಮ್ಮದ ರೋಷನ್ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಈಗಾಗಲೇ ಕ್ವಿಜ್ ಹಾಗೂ ಟೆಸ್ಟ್ ಪರೀಕ್ಷೆಗಳನ್ನು ಮಾಡಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ತಿಳಿಯಲು ಕೆಂಪು, ಹಳದಿ ಹಾಗೂ ಹಸಿರು ಗುಂಪುಗಳಾಗಿ ವಿಂಗಡಿಸಲಾಗಿದೆ. ಕೆಂಪು ಗುಂಪಿನ ಮಕ್ಕಳಿಗೆ ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಮೂರು ವಿಭಾಗದಲ್ಲಿ ವಿಂಗಡಣೆಯಿಂದ ವಿಷಯ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸ್ಥಿತಿಗತಿ ಬಗ್ಗೆ ಮಾಹಿತಿ ದೊರೆಯುತ್ತಿದ್ದು, ಕಲಿಕೆಯಲ್ಲಿ ಹಿಂದಿರುವ ಶಾಲೆಗಳ ಮೇಲೆ ನಿಗಾವಹಿಸಲು ಸಹಕಾರಿಯಾಗಿದೆ. ಈ ವರ್ಷ ಎಲ್ಲರಿಗೂ ಕಠಿಣ ಪರಿಶ್ರಮವಿದೆ. ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡೋಣ, ಶಿಕ್ಷಕರ ಮೇಲೆ ಗೌರವಿದೆ. ನಾನು ಇಲ್ಲಿ ನಿಂತು ಮಾತನಾಡಲು ಶಿಕ್ಷಕರು ಕಾರಣ. ಹಾಗಾಗಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಸಂಕಲ್ಪದಿಂದ ಒಂಚೂರು ಹಿಂದೆ ಹೋಗಬಾರದು. ಈ ವರ್ಷದಲ್ಲಿ ಜಿಲ್ಲೆಗೆ ರಾಜ್ಯಕ್ಕೆ ಮೊದನೇ ಸ್ಥಾನದಲ್ಲಿ ಬರಲು ಪ್ರಮಾಣ ಮಾಡೋಣ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಅವರು ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ರೂಪರೇಷೆಗಳ ತಿಳಿಸಿ, ಶಿಕ್ಷಕರು ಇನ್ನುಮುಂದೆ ರಜೆ ಪಡೆಯದೇ ಕಲಿಕೆ ಒತ್ತು ನೀಡಬೇಕು. ಸಾಧ್ಯವಾದರೇ ರಜೆದಿನಗಳಲ್ಲಿ ವಿಶೇಷ ತರಗತಿ ನಡೆಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಯಟ್ ಉಪನಿರ್ದೇಶಕ ಡಿ.ಎಂ.ಬಸವರಾಜ, ಡಯಟ್ ಹಿರಿಯ ಪ್ರಾಚಾರ್ಯ ಖಾಜಿ, ಅಕ್ಷರ ದಾಸೋಹ ಅಧಿಕಾರಿ ಅಡಿಗ, ಶ್ರೀಮತಿ ಸುನಿತಾ, ಸವಣೂರ ಕ್ಷೇತ್ರ ಶಿಕ್ಷಣಾಧಿಕಾರಿ ಬೆನಕಪ್ಪ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಶಿಗ್ಗಾಂವ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಮಠ, ಹಾನಗಲ್ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ, ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ ಹಾಗೂ ಹಿರೇಕೆರೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಣಾಧಿಕಾರಿ ಶ್ರೀಧರ, ಅವರು ಸ್ವಾಗತಿಸಿದರು.
______

Share this News
error: Content is protected !!