July 25, 2021

ಡಾಕ್ಟರ್ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಆಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ

ಹಾವೇರಿ – ಡಾಕ್ಟರ್ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ, ಆಸ್ಪತ್ರೆ ಮುಂದೆ ಬಾಣಂತಿಯ ಮೃತದೇಹವಿಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.‌

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಲಾಯಿತು.‌

ಮೃತ ಬಾಣಂತಿ ನಾಗಮ್ಮ‌ ಹೊನ್ನಮ್ಮಳವರ (32) ಮಾರ್ಚ್ 8ರಂದು ಆಸ್ಪತ್ರೆಗೆ ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ‌ ನೀಡಿದ್ದರು. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‌ಗಳಿಂದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೇ ನಾಗಮ್ಮ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಹೆರಿಗೆ ನಂತರ ಹೊಟ್ಟೆಯಲ್ಲಿರುವ ಮಾಂಸ ಮತ್ತು ಕರುಳು ಹೊರಬಂದಿದ್ದರಿಂದ ಬಾಣಂತಿಯನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಬಾಣಂತಿ ಮೃತಪಟ್ಟಿದ್ದಾಳೆ. ಆಸ್ಪತ್ರೆಯ ವೈದ್ಯ ಡಾ.ಚಿದಾನಂದ ಮತ್ತು ನರ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ. ತಕ್ಷಣವೇ ಬಾಣಂತಿ ಸಾವಿಗೆ ಕಾರಣರಾದ ವೈದ್ಯ ಮತ್ತು ನರ್ಸ್ ಮೇಲೆ‌ ಕ್ರಮ ಕೈಗೊಳ್ಳಬೇಕು, ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಪ್ರತಿಭಟನೆ ಯನ್ನು ಕೈಬಿಟ್ಟಿಲ್ಲ. ಹಿರಿಯ ವೈದ್ಯರು ಸ್ಥಳಕ್ಕೆ ಆಗಮಿಸಿ ವೈದ್ಯರ ಹಾಗೂ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
______

Share this News
error: Content is protected !!